ಉಡುಪಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಫೆ.20ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಫೆ. 20ರ ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯುವ ಬೂತ್ ಸಮಿತಿ ಸಮಾ ವೇಶ, ಮಧ್ಯಾಹ್ನ 2ಕ್ಕೆ ಬೈಂದೂರಿನಲ್ಲಿ ಬೃಹತ್ ವಾಹನ ಜಾಥಾ ಹಾಗೂ 2.30ಕ್ಕೆ ಮುಳ್ಳಿಕಟ್ಟೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯತಂಡ ಮತ್ತು ಪ್ರಮುಖರ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿದರು. ಜಿಲ್ಲೆಯ 1,111 ಬೂತ್ ಸಮಿತಿಗಳ ತಂಡ ಪೂರ್ಣ ಪ್ರಮಾಣದಲ್ಲಿ ಸಮಾವೇಶದಲ್ಲಿ ಭಾಗ ವಹಿಸಲಿದೆ ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ರಾ. ಅಧ್ಯಕ್ಷರ ಆಗಮನ ದಿಂದ ಸಂಘಟನ ಶಕ್ತಿಯ ಪ್ರದರ್ಶನಕ್ಕೆ ವೇದಿಕೆಯಾಗಲಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಬೂತ್ ಸಮಿತಿ ಸಮಾವೇಶದಲ್ಲಿ 15,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಫೆ.16ರಂದು ಕಾಪು, ಕಾರ್ಕಳ, ಫೆ.17ರಂದು ಬೈಂದೂರು, ಕುಂದಾಪುರ, ಉಡುಪಿ ನಗರ, ಉಡುಪಿ ಗ್ರಾಮಾಂತರ ಮಂಡಲಗಳ ಸಭೆ ನಡೆಯಲಿದೆ ಎಂದರು.
ಮಂಗಳೂರು ವಿಭಾಗ ಸಂಘಟನ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ ಉಪಸ್ಥಿತರಿದ್ದರು. ಮನೋಹರ್ ಎಸ್. ಕಲ್ಮಾಡಿ ವಂದಿಸಿ, ಸದಾನಂದ ಉಪ್ಪಿನಕುದ್ರು ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ