ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು.
ಪೊಲೀಸ್ ಮೂಲಗಳ ಪ್ರಕಾರ, ರಾತ್ರಿ ವೇಳೆ ಸುಹಾಸ್ ಶೆಟ್ಟಿ ಮೇಲೆ ನಾಲ್ವರು ದುಷ್ಕರ್ಮಿಗಳು ಹೊಂಚು ಹಾಕಿ ತಲವಾರುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನು ತಕ್ಷಣವೇ ಸ್ಥಳೀಯರು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಎಂಬಾತ ಕೊಲೆಯಾಗಿದ್ದನು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚೆಗಷ್ಟೇ ಸುಹಾಸ್ ಶೆಟ್ಟಿ ಜೈಲಿನಿಂದ ಬಿಡುಗಡೆಯಾಗಿದ್ದನು. ಬಿಡುಗಡೆಯಾದ ನಂತರ ಆತ ಯಾವುದೇ ಸಂಘಟನೆಯಲ್ಲಿ ಸಕ್ರಿಯನಾಗಿರಲಿಲ್ಲ ಎಂದು ತಿಳಿದುಬಂದಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯ ಮುಂದೆ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಹಲವು ಕೊಲೆ ಯತ್ನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆ ಮಾಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಫಾಜಿಲ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸುವ ಸಾಧ್ಯತೆ ಇದೆ. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ