ನವದೆಹಲಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣಗಳನ್ನು ಮುಂದಿಟ್ಟು ಜುಲೈ 21, 2025 ರಂದು ಅವರು ತಮ್ಮ ಪದತ್ಯಾಗ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿರುವ ಧನಕರ್, ಸಂವಿಧಾನದ 67(ಎ) ವಿಧಿಯ ಅಡಿಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಉಲ್ಲೇಖಿಸಿದ್ದಾರೆ. ವೈದ್ಯಕೀಯ ಸಲಹೆಯ ಮೇರೆಗೆ ತಮ್ಮ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಅವರು ಪತ್ರದಲ್ಲಿ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.
2022ರ ಆಗಸ್ಟ್ 11 ರಂದು ಭಾರತದ 14ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದ ಜಗದೀಪ್ ಧನಕರ್ ಅವರು, ರಾಜ್ಯಸಭೆಯ ಸಭಾಪತಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಅವರ ಅಧಿಕಾರಾವಧಿ 2027ರ ಆಗಸ್ಟ್‌ವರೆಗೆ ಇತ್ತು. ರಾಜಸ್ಥಾನ ಮೂಲದವರಾದ ಧನಕರ್, ಉಪರಾಷ್ಟ್ರಪತಿಯಾಗುವ ಮುನ್ನ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಧನಕರ್ ಅವರ ಅನಿರೀಕ್ಷಿತ ರಾಜೀನಾಮೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅವರ ಮುಂದಿನ ನಡೆ ಹಾಗೂ ತೆರವಾದ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಇದೀಗ ಎಲ್ಲೆಡೆ ಮೂಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ