ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ಗ್ರಾಮ ಪಂಚಾಯತಿಗಳ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಗ್ರಾಮ ಪಂಚಾಯಿತಿ ನೌಕರರು ಮುಷ್ಕರ ವಾಪಸ್ ಪಡೆದುಕೊಂಡಿದ್ದಾರೆ.
ಸಚಿವರ ಸಂಧಾನದ ನಂತರ ತಕ್ಷಣವೇ ಮುಷ್ಕರ ಎಂಬ ಹಿಂಪಡೆದು ಕಚೇರಿ ಕಾರ್ಯಗಳಲ್ಲಿ ತೊಡಗುವುದಾಗಿ ನೌಕರರ ಸಂಘದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ನೌಕರರ ಮಹಾ ಒಕ್ಕೂಟ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.
ಸುಮಾರು ಮೂರು ಗಂಟೆ ನಡೆದ ಸಭೆಯಲ್ಲಿ 75 ಹೆಚ್ಚು ಬೇಡಿಕೆಗಳನ್ನು ಆಲಿಸಿದ ಸಚಿವರು ಕಾನೂನು ಚೌಕಟ್ಟಿನಲ್ಲಿ ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸಲಾಗುವುದು. ಪಿಡಿಒಗಳಿಗೆ ಬಡ್ತಿ ಸೇರಿ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಹೇಳಿದ್ದಾರೆ.
ನೀವು ನೀಡಿದ ಭರವಸೆಯಂತೆ ಬೇಡಿಕೆಗಳನ್ನು ಈಡೇರಿಸಬೇಕೆಂದು ನೌಕರರು ಕೋರಿದ್ದಾರೆ.